ಮಂಗಳೂರು: ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸಾಮೆತ್ತಡ್ಕ ನಿವಾಸಿ ವಿಲೇಡ್ ಎಂಬಾತನು ತನ್ನ ಮನೆಯ ಸಮೀಪದ ಕಟ್ಟಡವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, 2023ರ ಕಲಂ 143(2) ಹಾಗೂ ಅನೈತಿಕ ಸಾಗಾಣಿಕೆ (ತಡೆ) ಕಾಯ್ದೆ, 1956ರ ಕಲಂ 3, 4, ಮತ್ತು 5(3)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಜು 15 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.