ಮಂಗಳೂರು: ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಂಗಳೂರು ಮೂಲದ ಪಾದ್ರಿ ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಪೆರ್ಮನ್ನೂರು ಗ್ರಾಮದ ಸಂತ ಸೆಬಾಸ್ಟಿಯನ್ ಚರ್ಚ್ನಲ್ಲಿ 13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2026ರ ಮೇ ತಿಂಗಳಲ್ಲಿ ಪೆರ್ಮನ್ನೂರಿನ ಸಂತ ಸೆಬಾಸ್ಟಿಯನ್ ಚರ್ಚ್ನಲ್ಲಿ ಪಾದ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪ್ರಿಯನ್ ಪಿಂಟೋ, ಮೇ 13ರಂದು ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತರು ತನಿಖೆಯನ್ನು ಕೇಂದ್ರ ವಿಭಾಗದ ಎಸಿಪಿಗೆ ವಹಿಸಿದ್ದಾರೆ. ಇನ್ನು ಪಾದ್ರಿ ಸಿಪ್ರಿಯನ್ ಪಿಂಟೋ ವಿರುದ್ಧ ಈ ಹಿಂದೆಯೂ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವೆಲೆನ್ಸಿಯಾ ಚರ್ಚ್ನಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಿಪ್ರಿಯನ್ ಪಿಂಟೋ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಮತ್ತೊಂದು ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದಡಿ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಈ ಹಿಂದೆ ದಾಖಲಾದ ಪ್ರಕರಣದ ವಿಚಾರವಾಗಿ ಮೈಸೂರಿನ ಒಡನಾಡಿ ಸಂಸ್ಥೆಯೂ ಹೋರಾಟ ನಡೆಸುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ತನಿಖೆಯ ಮೇಲೆ ಸಾರ್ವಜನಿಕರ ಗಮನ ನೆಟ್ಟಿದೆ. ಎರಡೂ ಪ್ರಕರಣಗಳಲ್ಲಿನ ಆರೋಪಗಳ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ
