ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ 16 ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಬಿಜೆಪಿ ಲೆಟರ್‌ಹೆಡ್‌ನಲ್ಲಿ ಶಿಫಾರಸು ಮಾಡಲಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ವತಿಯಿಂದ ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ.

SIR (Special Intensive Revision) ಪ್ರಕ್ರಿಯೆಯಡಿ ಸಲ್ಲಿಸಲಾಗಿರುವ ಫಾರ್ಮ್-7ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವಂತೆ ಶಿಫಾರಸು ಮಾಡಲಾಗಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಆರೋಪಿಸಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 16 ಮುಸ್ಲಿಂ ಮತದಾರರ ಪಟ್ಟಿಯನ್ನು ಚುನಾವಣಾ ಅಧಿಕಾರಿಗಳಿಗೆ ನೀಡಿ, ಅವರು ಸ್ಥಳದಲ್ಲಿ ವಾಸ್ತವ್ಯ ಹೊಂದಿಲ್ಲ ಎಂಬ ಕಾರಣ ನೀಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವಂತೆ ಶಿಫಾರಸು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದರೆ, ಈ ಮತದಾರರು ವಾಸ್ತವ್ಯವಿಲ್ಲದವರು ಎಂಬ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದ್ದು, ವಾಸ್ತವ್ಯ ಹೊಂದಿರುವ ಮತದಾರರನ್ನು ತಹಶೀಲ್ದಾರ್ ಎದುರು ಹಾಜರುಪಡಿಸಲಾಗಿದೆ ಎಂದು ಹೇಳಿದೆ. ಈ ಪ್ರಕರಣದಲ್ಲಿ SIR ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡು ಮತದಾರರ ಹೆಸರುಗಳನ್ನು ಕೈಬಿಡಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ, ಸಂಬಂಧಪಟ್ಟ ಬಿಜೆಪಿ BLAಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾಧಿಕಾರಿಗಳಿಗೆ ಆಗ್ರಹಿಸಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಮಾತನಾಡಿ, ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡಬಾರದು. ವಾಸ್ತವ್ಯ ಹೊಂದಿರುವ ಮತದಾರರ ವಿರುದ್ಧ ತಪ್ಪು ಮಾಹಿತಿ ನೀಡಿ ಹೆಸರುಗಳನ್ನು ತೆಗೆದುಹಾಕಲು ಶಿಫಾರಸು ಮಾಡಿರುವುದು ಕಂಡುಬಂದಲ್ಲಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
